ಭಾರತೀಯ ಹಾಗೂ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. ಸೆಪ್ಟೆಂಬರ್ 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಗೌರವ ಪ್ರದಾನ ನಡೆಯಲಿದೆ. ಕನ್ನಡ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ 1995ರ ಸಾಲಿನ (43ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ) ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ವರನಟ ಡಾ. ರಾಜ್‌ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿತ್ತು. ಇವರು ಈ ಪ್ರಶಸ್ತಿಯನ್ನು ಪಡೆದ ಮೊದಲ ಕನ್ನಡಿಗ ನಟ ಎಂಬ ಹೆಗ್ಗಳಿಕೆ ಪಡೆದಿದ್ದರು. ಅಲ್ಲಿಂದ ಇಲ್ಲಿಯವರೆಗೆ ಕನ್ನಡದ ಬೇರ್ಯಾವ ನಟರು ಕೂಡ ಈ ಪ್ರಶಸ್ತಿಗೆ ಭಾಜನರಾಗಿರಲಿಲ್ಲ. ಆದರೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ 2024ನೇ ಸಾಲಿನ ಗೌರವಕ್ಕೆ ಅನಂತ್ ನಾಗ್ ಅವರು ಭಾಜನರಾಗಿರೋದು ಕನ್ನಡಿಗರಿಗೆ ಸಂತಸದ ಜೊತೆಗೆ ಗೌರವವನ್ನೂ ಹೆಚ್ಚಿಸಿದೆ.