ಬೆಂಗಳೂರು, ನವೆಂಬರ್ 4, 202 : ಕರ್ನಾಟಕದಲ್ಲಿ ನಾಳೆಯಿಂದ 2-3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವೆಡೆ ಒಣ ಹವೆ ಇರಲಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಮಾಹಿತಿ ನೀಡಿದೆ.
ಇವತ್ತು ಕರಾವಳಿಯ ಜಿಲ್ಲೆಗಳು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ.
ಹಾಗೆಯೇ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು, ನವೆಂಬರ್ 5, 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ..!
ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಅಲ್ಲಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ
