ಬೆಳಗಾವಿ, ನವೆಂಬರ್ 7, 2025 : ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್ ಕಬ್ಬಿಗೆ 3,500 ರೂಪಾಯಿ ನೀಡುವಂತೆ ಪಟ್ಟು ಹಿಡಿದಿರುವ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಮುಂದಾಗಿದ್ದ ಸಂದರ್ಭದಲ್ಲಿ, ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಈಗಾಗಲೇ 9ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ, ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಗ, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಇದಕ್ಕೆ ಪ್ರತಿಯಾಗಿ, ಆಕ್ರೋಶಗೊಂಡ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಒಂದೆಡೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬು ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸುತ್ತಿದ್ದರೆ, ಇತ್ತ ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದು ಹತ್ತರಗಿ ಟೋಲ್ ಗೇಟ್ ಬಳಿ ರಸ್ತೆ ತಡೆಗೆ ಮುಂದಾದ ಕಾರಣ ಲಾಠಿಚಾರ್ಜ್‌ಗೆ ಕಾರಣವಾಯಿತು. ಇದರಿಂದ ಕೋಪಗೊಂಡ ರೈತರು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಿದ್ದು, ಸ್ಥಳದಲ್ಲಿ ಕ್ಷಣ ಕ್ಷಣಕ್ಕೂ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವುದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
