ಮೈಸೂರು, ನವೆಂಬರ್ 13, 2025 :ಮೈಸೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರವಾಗಿ ಹುಲಿ ದಾಳಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಇಂದು ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ (ಪರ್ವ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ನಿರತ ರೈತರು ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಹುಲಿ ದಾಳಿಗಳನ್ನು ನಿಯಂತ್ರಿಸುವಲ್ಲಿ ಹಾಗೂ ಜನ, ಜಾನುವಾರುಗಳ ರಕ್ಷಣೆಯಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ದೂರಿದರು.
ಹುಲಿಗಳು ಜನವಸತಿ ಪ್ರದೇಶಗಳಿಗೆ ಬರಲು ಪ್ರಮುಖ ಕಾರಣವಾಗಿರುವ, ಕಾಡಿನ ಒಳಗೆ ಅಕ್ರಮವಾಗಿ ನಿರ್ಮಿಸಿರುವ ರೆಸಾರ್ಟ್‌ಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ರೈತರು ಬಲವಾಗಿ ಆಗ್ರಹಿಸಿದರು. ಅಕ್ರಮ ರೆಸಾರ್ಟ್‌ಗಳಿಂದಾಗಿ ವನ್ಯಜೀವಿಗಳ ಓಡಾಟಕ್ಕೆ ಅಡಚಣೆಯಾಗಿದ್ದು, ಅವು ನಾಡಿನ ಕಡೆ ಮುಖಮಾಡುತ್ತಿವೆ ಎಂಬುದು ರೈತರ ಆರೋಪವಾಗಿದೆ.
ಪ್ರತಿಭಟನೆಯ ಬಳಿಕ, ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ತಮ್ಮ ಬೇಡಿಕೆಗಳು ಮತ್ತು ಹುಲಿ ದಾಳಿಗಳ ತಡೆಗೆ ಅಗತ್ಯ ಕ್ರಮಗಳ ಕುರಿತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. ರೈತರ ಬೇಡಿಕೆಗಳ ಕುರಿತು ಅರಣ್ಯ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
