ಉಡುಪಿ , ನವೆಂಬರ್ 27, 2025 : ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರ ಶುಕ್ರವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆ ಕೃಷ್ಣ ನಗರಿಯಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಕಠಿಣ ಆದೇಶ ಹೊರಡಿಸಿದ್ದಾರೆ.
ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಬಿಗಿ ಖಾಕಿ ಭದ್ರತೆ ಬಗ್ಗೆ ನಿಗಾ ವಹಿಸಲಾಗಿದೆ. ಸಂಚಾರ ಮತ್ತು ಭೇಟಿ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ ವಠಾರ ಹಾಗೂ ಪ್ರವಾಸಿ ಮಂದಿರದ ಸುತ್ತಮುತ್ತ ಅಂಗಡಿ–ಮುಂಗಟ್ಟುಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಹಾಗೆಯೇ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಇನ್ನು,ನವೆಂಬರ್ 26 ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಸಾರ್ವಜನಿಕರು ಬ್ಯಾಗ್, ನೀರಿನ ಬಾಟಲ್, ಧ್ವಜ, ಸ್ಟಿಕರ್, ಬಲೂನು, ಪಟಾಕಿ, ಲೂಸ್ ಪಾಲಿಥಿನ್ ವಸ್ತುಗಳನ್ನು ತರದಂತೆ ಸೂಚಿಸಲಾಗಿದೆ.
ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ನಂತರ ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಪ್ರಧಾನಿಯನ್ನು ಸ್ವಾಗತಿಸಲು ಪನ್ನಂಜೆ-ಕಲ್ಸಂಗ ಮಾರ್ಗದಲ್ಲಿ 30,000 ಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ರೋಡ್ ಶೋ ವೀಕ್ಷಿಸಲು ಬಯಸುವ ಸಾರ್ವಜನಿಕರು ನವೆಂಬರ್ 28 ರಂದು ಬೆಳಿಗ್ಗೆ 10.30 ರೊಳಗೆ ಅಲ್ಲಿಗೆ ತಲುಪಲು ಕೇಳಿಕೊಳ್ಳಲಾಗಿದೆ. ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗುವುದು ಎಂದು ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.
ಇನ್ನೂ, ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಪಿ.ವೈ. ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಕ್ಯಾಪ್ಟನ್ ಬ್ರಿಜೇಶ್ ಚೌಧರಿ, ಶಾಸಕರು ಮತ್ತು ಹಲವಾರು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.
