ಮೈಸೂರು, ಡಿಸೆಂಬರ್ 27, 2025 :ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದ ಬಳಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ಮೃತಪಟ್ಟ ಸಲೀಂ ವಿರುದ್ಧವೇ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ಪ್ರವಾಸಿ ಕೊಟ್ರೇಶ್ ಬೀರಪ್ಪ ಎಂಬುವರು ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕೊಟ್ರೇಶ್ ಬೀರಪ್ಪ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಯಾಗಿದ್ದು, ಕೆಎಸ್‌ಆರ್‌ಟಿಸಿಯಲ್ಲಿ (KSRTC) ಎಫ್‌ಡಿಎ (FDA) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಟುಂಬದೊಂದಿಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ಕೊಟ್ರೇಶ್ ಬೀರಪ್ಪ ಅವರು ಅರಮನೆಯ ಜಯಮಾರ್ತಾಂಡ ಗೇಟ್ ಬಳಿ ಇದ್ದಾಗ ಈ ದುರ್ಘಟನೆ ಸಂಭವಿಸಿದೆ. ತಮ್ಮ ಮಕ್ಕಳಿಗೆ ಬಲೂನ್ ಕೊಡಿಸಲು ಕೊಟ್ರೇಶ್ ಅವರು ಸಲೀಂ ಬಳಿ ತೆರಳಿದ್ದರು. ಬಲೂನ್ ಮಾರಾಟಗಾರ ಸಲೀಂ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ, ಸೈಕಲ್ ಮೇಲೆ ಸಿಲಿಂಡರ್ ಇಟ್ಟುಕೊಂಡು ಬಲೂನ್‌ಗಳಿಗೆ ಗಾಳಿ ತುಂಬಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಹಠಾತ್ ಆಗಿ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಲಕ್ಷ್ಮಿ, ಮಂಜುಳಾ ಮತ್ತು ಶಹೀನಾ ಶಬ್ಬೀರ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಫ್‌ಐಆರ್‌ನಲ್ಲಿ ಏನಿದೆ?
ಸಾರ್ವಜನಿಕ ಪ್ರದೇಶದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ನಿರ್ಲಕ್ಷ್ಯ ವಹಿಸಿದ್ದೇ ಈ ಸ್ಫೋಟಕ್ಕೆ ಕಾರಣ ಎಂದು ಕೊಟ್ರೇಶ್ ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಸಲೀಂನನ್ನು ಎ-1 (A1) ಆರೋಪಿಯನ್ನಾಗಿ ಮಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
