ಬೆಂಗಳೂರು, ಡಿಸೆಂಬರ್ 29, 2025 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೈ ಕೊರೆಯುವ ಚಳಿ ವ್ಯಾಪಿಸಿದ್ದು, ದಟ್ಟ ಮಂಜು ಹಾಗೂ ಶೀತಗಾಳಿಗೆ ಜನರು ಕಂಗಾಲಾಗಿದ್ದಾರೆ.ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಥಂಡಿ ಹೆಚ್ಚಾಗಲಿದ್ದು, ಒಣಹವೆ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಚಳಿ ಜತೆ ಒಣಹವೆ ವಾತಾವರಣ ಇರಲಿದೆ.
ಇನ್ನು,ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿಯಲಿದ್ದು, ಡಿ. 30 ಹಾಗೂ ಜ1ಕ್ಕೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಚಳಿ ಹಿನ್ನೆಲೆ ಮಕ್ಕಳು ಹಾಗೂ ವೃದ್ಧರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಸಲಹೆ ನೀಡಿದ್ದಾರೆ.
