ಮೈಸೂರು, ಡಿಸೆಂಬರ್ 30, 2025 : ವಿಶ್ವವಿಖ್ಯಾತ ತಲಕಾಡು ಸಮೀಪದ ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಟಿ. ನರಸೀಪುರ ತಾಲ್ಲೂಕಿನ ಮುಡುಕುತೊರೆ ಗ್ರಾಮದಲ್ಲಿ ನಡೆದ ಈ ಸಭೆಯಲ್ಲಿ, ಮುಂಬರುವ ಜಾತ್ರಾ ಮಹೋತ್ಸವವನ್ನು ವ್ಯವಸ್ಥಿತವಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಜನವರಿ 21ರಿಂದ ಅದ್ಧೂರಿಯಾಗಿ ಮುಡುಕುತೊರೆ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಭಕ್ತರ ಅನುಕೂಲಕ್ಕಾಗಿ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ಭದ್ರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಪ್ರಮುಖವಾಗಿ ಈ ಅಂಶಗಳ ಬಗ್ಗೆ ನಿರ್ದೇಶನ ನೀಡಲಾಯಿತು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು, ಜನವರಿ 21ರಿಂದ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತದಿಂದ ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಕ್ತರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನಿಗಾ ವಹಿಸಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
