ಮಹಾರಾಷ್ಟ್ರ, ಜನವರಿ 28, 2026 : ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಮುಂಬೈನಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಜಿಲ್ಲಾ ಪಂಚಾಯತ್ ಚುನಾವಣಾ ಪ್ರಚಾರದ ನಿಮಿತ್ತ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಬೆಳಿಗ್ಗೆ ಸುಮಾರು 8:45ರ ಸುಮಾರಿಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಿಮಾನವು ನಿಯಂತ್ರಣ ತಪ್ಪಿ ರನ್‌ವೇ ಮೇಲೆ ಅಪ್ಪಳಿಸಿದೆ. ವಿಮಾನವು ನೆಲಕ್ಕೆ ಅಪ್ಪಳಿಸಿದ ತಕ್ಷಣ ಭೀಕರವಾಗಿ ಬೆಂಕಿ ಹೊತ್ತಿಕೊಂಡಿದ್ದು, ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ಮೂಲಗಳು ದೃಢಪಡಿಸಿವೆ.
ಘಟನಾ ಸ್ಥಳಕ್ಕೆ ಈಗಾಗಲೇ ರಕ್ಷಣಾ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ಪೂರ್ಣಗೊಂಡಿವೆ. ಈ ಸುದ್ದಿಯು ತಿಳಿಯುತ್ತಿದ್ದಂತೆಯೇ ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕದ ಛಾಯೆ ಆವರಿಸಿದೆ. ದಶಕಗಳ ಕಾಲ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಅಜಿತ್ ಪವಾರ್ ಅವರು ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆ ಹೊಂದಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಘಟನೆಯ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಈ ಗಂಭೀರ ಅಪಘಾತದ ಕುರಿತು ಸಮಗ್ರ ತನಿಖೆ ನಡೆಸುವಂತೆ DGCA ಈಗಾಗಲೇ ಉನ್ನತ ಮಟ್ಟದ ಆದೇಶ ಹೊರಡಿಸಿದೆ.
