ಮೈಸೂರು, ಫೆಬ್ರವರಿ 4, 2026 : ಸಾಂಸ್ಕೃತಿಕ ನಗರಿಯ ಹೃದಯಭಾಗದಲ್ಲಿರುವ ಐತಿಹಾಸಿಕ ಕುಕ್ಕರಹಳ್ಳಿ ಕೆರೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪದೇ ಪದೇ ಪ್ರತ್ಯಕ್ಷವಾಗುತ್ತಿದ್ದು, ಸಾರ್ವಜನಿಕರಲ್ಲಿ ಭಾರೀ ಭೀತಿ ಮೂಡಿಸಿದೆ.

ನಿನ್ನೆ ಮುಂಜಾನೆ ಎಂದಿನಂತೆ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ. ಕೆರೆಯ ನೀರಿನಲ್ಲಿ ಅತ್ಯಂತ ಲೀಲಾಜಾಲವಾಗಿ ಈಜಾಡುತ್ತಿದ್ದ ಮೊಸಳೆಯನ್ನು ಕಂಡು ವಾಯುವಿಹಾರಿಗಳು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.
ಕಳೆದ ಕೆಲವು ದಿನಗಳಿಂದ ಈ ಕೆರೆಯಲ್ಲಿ ಮೊಸಳೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದು, ಈಗ ಅದರ ಗಾತ್ರ ದೊಡ್ಡದಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಈ ಕೆರೆಯ ಏರಿಯ ಮೇಲೆ ಪ್ರತಿದಿನ ಸಾವಿರಾರು ಜನರು ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರ ನಡೆಸುತ್ತಾರೆ, ಅಲ್ಲದೆ ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹೀಗಾಗಿ ಕೆರೆಯ ಬದಿಯಲ್ಲಿ ಸಂಚರಿಸುವಾಗ ಸಾರ್ವಜನಿಕರು ತೀವ್ರ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಅರಣ್ಯ ಇಲಾಖೆಯು ಕೂಡಲೇ ಈ ಬಗ್ಗೆ ಗಮನಹರಿಸಿ ಮುಂದಿನ ಅನಾಹುತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
