ಮೈಸೂರು, ಜುಲೈ 21, 2026 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪೊಲೀಸ್ ಗೋಲಿಬಾರ್ ಖಂಡಿಸಿ ಮೈಸೂರಿನಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಸಂಘಟನೆಯ ನೇತೃತ್ವದಲ್ಲಿ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಸಾಲು ಸಾಲು ಘೋಷಣೆಗಳನ್ನು ಕೂಗಿ ತಮ್ಮ ವಿರೋಧ ದಾಖಲಿಸಿದರು. ಎನ್‌ಟಿಎ (NTA) ಸಂಸ್ಥೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ನೀಟ್ (NEET) ಪರೀಕ್ಷೆಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಇಡೀ ನೀಟ್ ಹಗರಣವನ್ನು ಸಮಗ್ರವಾಗಿ ನ್ಯಾಯಾಂಗ ತನಿಖೆಗೆ ವಹಿಸಬೇಕು ಹಾಗೂ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಭ್ರಷ್ಟಾಚಾರ ಮತ್ತು ಪರೀಕ್ಷೆಗಳ ಗೊಂದಲಗಳಿಂದಾಗಿ ದೇಶಾದ್ಯಂತ ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಾರ್ವಜನಿಕರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪರೀಕ್ಷೆ ಮುಂದೂಡಿಕೆ ಹಾಗೂ ಹಗರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಈ ಸಂದರ್ಭದಲ್ಲಿ ಎಸ್‌ಎಫ್‌ಐ ಮುಖಂಡರು ಸರ್ಕಾರವನ್ನು ಆಗ್ರಹಿಸಿದರು.
