ಮೈಸೂರು, ಜುಲೈ.23,2026: ನೀಟ್ (NEET) ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಶ್ರದ್ಧಾಂಜಲಿ ಕಾರ್ಯಕ್ರಮದ ನೆಪದಲ್ಲಿ ಮಹಾರಾಣಿ ಸರ್ಕಾರಿ ಕಾಲೇಜಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫೋಟೋ ಬಳಸಿ ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ನಗರಾಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್. ನಾಗೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಕರೆಯಲಾಗಿದ್ದ ತುರ್ತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ಥಳೀಯ ಶಾಸಕ ಹರೀಶ್ ಗೌಡ ಅವರ ನೇತೃತ್ವದಲ್ಲಿ ಸರ್ಕಾರಿ ಕಾಲೇಜಿನ ಆವರಣದಲ್ಲೇ ಕಾಂಗ್ರೆಸ್ ಪಕ್ಷದ ಪ್ರಚೋದನಾತ್ಮಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನಲ್ಲಿ ರಾಜಕೀಯಕ್ಕೆ ವಿರೋಧ: ಸರ್ಕಾರಿ ಕಾಲೇಜುಗಳಲ್ಲಿ ಶ್ರದ್ಧಾಂಜಲಿ ನೆಪದಲ್ಲಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಪಿತೂರಿ ನಡೆಯುತ್ತಿದೆ. ಕಾಲೇಜು ಆವರಣದಲ್ಲಿ ರಾಹುಲ್ ಗಾಂಧಿ ಫೋಟೋ ಹಾಕಿ ಕಾರ್ಯಕ್ರಮ ಮಾಡಲು ಯಾರ ಅನುಮತಿ ನೀಡಿದ್ದಾರೆ? ಶಾಸಕ ಹರೀಶ್ ಗೌಡ ಕಾಲೇಜುಗಳಲ್ಲಿ ಈ ರೀತಿಯ ಕಾರ್ಯಕ್ರಮ ಮಾಡಲು ಅವಕಾಶ ನೀಡಿದರೆ, ಮುಂದಿನ ದಿನಗಳಲ್ಲಿ ನಮಗೂ ಕಾರ್ಯಕ್ರಮ ಮಾಡಲು ಅವಕಾಶ ನೀಡಬೇಕಾಗುತ್ತದೆ.
ಅಧಿಕಾರಿಗಳಿಗೆ ಕರೆ: ಈ ಕುರಿತು ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ (DDPU) ಕರೆ ಮಾಡಿ ಮಾತನಾಡಿದ್ದು, ಯಾವುದೇ ಕಾರಣಕ್ಕೂ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಲಾಗಿದೆ.
ವಿದ್ಯಾರ್ಥಿಗಳ ಜೀವನದ ಜೊತೆ ಆಟ: ನೀಟ್ ಪರೀಕ್ಷೆ ಅಕ್ರಮ ವಿಚಾರವಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ದೇಶದಲ್ಲಿ ಅಶಾಂತಿ ಸೃಷ್ಟಿಸಲು ಮತ್ತು ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲು ನಾಟಕವಾಡುತ್ತಿದ್ದಾರೆ.
ಪೊಲೀಸ್ ಇಲಾಖೆಗೆ ಎಚ್ಚರಿಕೆ: ಮೈಸೂರು ಪೊಲೀಸರು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಕ್ರಮವಾಗಿ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಸಲು ಪೊಲೀಸರು ಅನುಮತಿ ಕೊಟ್ಟಿದ್ದಾರೆಯೇ? ಮಹಾರಾಣಿ ಕಾಲೇಜು ಬಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಂಗ್ರೆಸ್ ವಿರುದ್ಧ ನಾವೂ ಕೂಡ ಪ್ರತಿಭಟನೆ ಮಾಡಿದ್ದೇವೆ. ಶಾಸಕ ಹರೀಶ್ ಗೌಡ ಅವರಿಗೆ ಧೈರ್ಯವಿದ್ದರೆ ಕಾಲೇಜಿನ ಹೊರಗೆ ಕಾರ್ಯಕ್ರಮ ಮಾಡಲಿ.
ಈ ಕೃತ್ಯದ ವಿರುದ್ಧ ಬಿಜೆಪಿ ತೀವ್ರ ಹೋರಾಟ ರೂಪಿಸಲಿದ್ದು, ಕಾಲೇಜು ಆವರಣಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ನಾಗೇಂದ್ರ ಸ್ಪಷ್ಟಪಡಿಸಿದರು.
