ಹುಣಸೂರು, ಏಪ್ರಿಲ್ 9, 2026 : ತಾಲೂಕಿನ ಕಟ್ಟೆಮಳಲವಾಡಿ ಬಳಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ವ್ಯಾನ್ ಅನ್ನು ತಡೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ದುಷ್ಕರ್ಮಿಗಳು, ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಚಂದ್ರಮೌಳಿ ಹಲ್ಲೆಗೊಳಗಾದ ಯುವಕ.
ಘಟನೆಯ ವಿವರದಂತೆ, ಚಂದ್ರಮೌಳಿ ಅವರು ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ವ್ಯಾನ್ ಅನ್ನು ಗಮನಿಸಿ ಅದನ್ನು ತಡೆದಿದ್ದರು. ಈ ವೇಳೆ ಕಾರಿನಲ್ಲಿ ಬಂದ ನಾಲ್ವರು ಅಪರಿಚಿತರು ಚಂದ್ರಮೌಳಿ ಅವರೊಂದಿಗೆ ವಾಗ್ವಾದಕ್ಕಿಳಿದು, ಏಕಾಏಕಿ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಮುಸ್ಲಿಂ ಯುವಕರೆಂದು ಆರೋಪಿಸಲಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಚಂದ್ರಮೌಳಿ ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ಹುಣಸೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
