ಹುಣಸೂರು, ಏಪ್ರಿಲ್ 21, 2026: ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ಬಿರುಬೇಸಿಗೆಯ ತಾಪಕ್ಕೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಹನಿ ನೀರಿಗೂ ಪರದಾಡುವಂತಾಗಿದೆ. ಸೂಳೆ ಕೆರೆಯಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್‌ಲೈನ್‌ಗಳು ದುರಸ್ತಿಯಾಗದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿದ್ದು, ಸದ್ಯ ಟ್ಯಾಂಕರ್ ಮೂಲಕ ಗ್ರಾಮಕ್ಕೆ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.
ಗ್ರಾಮಕ್ಕೆ ನೀರು ಒದಗಿಸುವ ಪೈಪ್‌ಲೈನ್ ಕೆಟ್ಟು ಹೋಗಿದ್ದರೂ ಅದನ್ನು ಸರಿಪಡಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಸಹ ನೀರು ಪೂರೈಕೆಯಲ್ಲಿ ಪದೇ ಪದೇ ವ್ಯತ್ಯಯವಾಗುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮಂಜುಳಾ ಅವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರು, ಪೈಪ್‌ಲೈನ್ ದುರಸ್ತಿ ಮಾಡದೆ ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ದೂರಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ಹುಣಸೂರು ತಾಲೂಕು ಆಡಳಿತ ಹಾಗೂ ಪಿಡಿಒ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ ಗ್ರಾಮಸ್ಥರು, ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
