ಮೈಸೂರು, ಫೆಬ್ರವರಿ 27, 2026 : ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದ ದಂಪತಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ನಾರಾಯಣಪುರ (ಕಗ್ಗರೆ) ಬಳಿ ಸಂಭವಿಸಿದೆ.

ಮೈಸೂರಿನ ಸುಬ್ರಮಣ್ಯನಗರದ ನಿವಾಸಿಗಳಾದ 51 ವರ್ಷದ ನಂಜುಂಡಸೋಮಾಚಾರ್ ಮತ್ತು ಅವರ ಪತ್ನಿ 48 ವರ್ಷದ ನೇತ್ರಾವತಿ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಃ ಬೀರನಹಳ್ಳಿ ಗ್ರಾಮದವರಾದ ಈ ದಂಪತಿ, ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಬೈಕ್‌ನಲ್ಲಿ ತೆರಳುತ್ತಿದ್ದರು.
ದಂಪತಿ ಪ್ರಯಾಣಿಸುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಕಾರು ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
