ಸರಗೂರು, ಏಪ್ರಿಲ್ 18, 2026: ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಬಡ್ಡಯ್ಯ ಎಂಬುವರ ಪುತ್ರ ಜವರಪ್ಪ (38) ಮೃತಪಟ್ಟ ದುರ್ದೈವಿಯಾಗಿದ್ದು, ಈತನ ಮೃತದೇಹವು ಗ್ರಾಮದ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸರಗೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಬಗ್ಗೆ ತೀವ್ರ ಅನುಮಾನಗಳು ವ್ಯಕ್ತವಾಗಿದ್ದು, ಘಟನಾ ಸ್ಥಳದ ಸುತ್ತಮುತ್ತಲಿನ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
