ಮೈಸೂರು, ಜುಲೈ 22, 2026: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2014 ರಿಂದ ಇಲ್ಲಿಯವರೆಗೆ 152 ಪ್ರಮುಖ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಬಹಿರಂಗವಾಗಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ತೀವ್ರ ತೊಂದರೆ ಅನುಭವಿಸಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ಆರೋಪಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ನೇರ ಕಾರಣ. ಇದರಿಂದ ಮನನೊಂದ ಬಡ ಹಾಗೂ ಮಧ್ಯಮ ವರ್ಗದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇಷ್ಟೇ ಅಲ್ಲದೆ, ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ತೀವ್ರ ಖಂಡನೀಯ. ಪ್ರತಿಭಟನೆ ವೇಳೆ ಸಿವಿಲ್ ಡ್ರೆಸ್‌ನಲ್ಲಿದ್ದ ಕೆಲವರು ವಿದ್ಯಾರ್ಥಿಗಳ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದು, ಅವರು ಆರ್‌ಎಸ್‌ಎಸ್‌ನ ಗೂಂಡಾಗಳಾಗಿದ್ದಾರೆ ಎಂದು ಗಂಭೀರವಾಗಿ ಕಿಡಿಕಾರಿದರು.
ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಗೆ ಮುಂದಾಗಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಿದ ಕೇಂದ್ರ ಸರ್ಕಾರದ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ದೇಶದಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಗೋಪಿನಾಥ್ ಪಳನಿಯಪ್ಪನ್ ಟೀಕಿಸಿದರು.
