ಬೆಂಗಳೂರು, ನವೆಂಬರ್ 6, 2025 : ರಾಜ್ಯ ರಾಜಕೀಯದಲ್ಲಿ ಕೇಳಿಬರುತ್ತಿರುವ ನವೆಂಬರ್ ಕ್ರಾಂತಿಯ ಗುಸುಗುಸು ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹತ್ವದ ಸಂಪುಟ ಸಭೆ ನಿಗದಿಯಾಗಿದ್ದು, ಕ್ಯಾಬಿನೆಟ್ ಮೀಟಿಂಗ್ ಸಾಕಷ್ಟು ಕುತೂಹಲ ಕೆರಳಿಸಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಮೀಟಿಂಗ್ ಕರೆಯಲಾಗಿದೆ. ಪ್ರಮುಖವಾಗಿ ಸಭೆಯಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನೂತನ ಕಾಯ್ದೆ ಜಾರಿಗೊಳಿಸುವ ಬಗ್ಗೆ ಕರಡು ನಿಯಮಗಳಿಗೆ ಅಂಗೀಕಾರ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಹಿರಿಯ ಸಚಿವರ ತೀರ್ಮಾನದ ಬಗ್ಗೆ ಕೌತುಕ ಮನೆ ಮಾಡಿದೆ. ಹಾಗೆಯೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಕಿ ಅಂಶಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡುವ ಸಾಧ್ಯತೆ ಇದೆ.
ಇದಲ್ಲದೆ, ಬೆಳಗಾವಿ ಚಳಿಗಾಲದ ಅಧಿವೇಶನ ನಡೆಸಲು ದಿನಾಂಕ ಅಂತಿಮಗೊಳಿಸುವ ಸಾಧ್ಯತೆ ಇದೆ. ಡಿಸೆಂಬರ್ 8 ರಿಂದ 19 ರವರೆಗೆ 10 ದಿನ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಇಂದು ಸಂಪುಟ ಸಭೆಯಲ್ಲಿ ಅಧಿಕೃತ ದಿನಾಂಕ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಜತೆಗೆ ಕಬ್ಭು ಬೆಳೆಗಾರರ ಸಮಸ್ಯೆ ಬಗೆಹರಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 3500 ರೂ ಬೆಂಬಲ ಬೆಲೆ ನಿಗದಿ ಘೋಷಿಸೋ ಬಗ್ಗೆಯೂ ಮಹತ್ವದ ಚರ್ಚೆ ನಡೆಯಲಿದ್ದು, ಎಲ್ಲರ ಚಿತ್ತ ಇದೀಗ ಸಂಪುಟ ಸಭೆಯತ್ತ ನೆಟ್ಟಿದೆ.
