ಬೆಂಗಳೂರು , ಡಿಸೆಂಬರ್ 1, 2025 : ಸಿಎಂ ಕುರ್ಚಿ ಕದನಕ್ಕೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಹಗ್ಗಜಗ್ಗಾಟ ತೆರೆಮರೆಯಲ್ಲಿ ಮುಂದುವರಿದಿದೆ.
ದೆಹಲಿ ಮಟ್ಟದಲ್ಲಿ ಮಾತುಕತೆ ಮುಂದುವರಿದಿದೆ. ಈ ಮಧ್ಯೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ‘ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗವಹಿಸಿದ ನಂತರ ಇದೀಗ, ಮಂಗಳವಾರ ಬೆಳಗ್ಗೆ ಡಿಕೆ ಶಿವಕುಮಾರ್ ನಿವಾಸದಲ್ಲಿ ಆಯೋಜನೆಗೊಂಡಿರುವ ‘ ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಮಂಗಳವಾರ ಬೆಳಗ್ಗೆ 9.30ಕ್ಕೆ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ಖಾಸಗಿ ನಿವಾಸದಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್’ಗಾಗಿ ಹಾಜರಾಗಲಿದ್ದಾರೆ.
ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದ್ದು, ಪರಿಹಾರ ಸೂಚಿಸುವಂತೆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ವೇಣುಗೋಪಾಲ್ ಹಾಗೂ ಎಐಸಿಸಿಯ ಇತರ ಹಿರಿಯ ನಾಯಕರು ಹಾಗೂ ಗಾಂಧಿ ಕುಟುಂಬದವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಎಚ್ಚರಿಕೆ ಹೆಜ್ಜೆ ಇಟ್ಟಿದ್ದು, ಇದರ ಮಧ್ಯೆ ಮತ್ತೊಂದು ಬ್ರೇಕ್ ಫಾಸ್ಟ್ ಮೀಟಿಂಗ್ ಸಾಕಷ್ಟು ಕುತೂಹಲ ಕೆರಳಿಸಿದೆ.
