ಮೈಸೂರು, ಜನವರಿ 12, 2026 : ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಅಮಾನವೀಯ ದೌರ್ಜನ್ಯವನ್ನು ಖಂಡಿಸಿ ಮೈಸೂರಿನಲ್ಲಿ ಇಂದು ನಗರ ಬಿಜೆಪಿ ಘಟಕದ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರಮುಖ ಕೇಂದ್ರವಾದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು, ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿರುವ ಘಟನೆಯನ್ನು ಖಂಡಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ರೊಚ್ಚಿಗೆದ್ದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ ಮುಖಂಡರು, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದರು.
ಈ ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್. ನಾಗೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷರು ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡು ಘಟನೆಯ ವಿರುದ್ಧ ಒಗ್ಗಟ್ಟಿನ ಧ್ವನಿ ಎತ್ತಿದರು.
