ಮೈಸೂರು, ಏಪ್ರಿಲ್ 18 : ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಮುಸ್ಲಿಂ ಧರ್ಮಗುರುಗಳ ಒಕ್ಕೂಟವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಗುರುಗಳು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 85 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದರೂ ಸಮುದಾಯದ ನಾಯಕರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಚುನಾವಣೆ ಮುಗಿಯುತ್ತಿದ್ದಂತೆ ಶಿಸ್ತು ಕ್ರಮದ ನೆಪದಲ್ಲಿ ಮುಸ್ಲಿಂ ನಾಯಕರನ್ನು ಗುರಿ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದು ಕಾಂಗ್ರೆಸ್‌ನ ಮುಸ್ಲಿಂ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ ಎಂದು ಕಿಡಿಕಾರಿದರು.
ಈಗಾಗಲೇ ನಸೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರಂತಹ ಹಿರಿಯ ಮುಸ್ಲಿಂ ನಾಯಕರ ತಲೆದಂಡವಾಗಿದ್ದು, ಮುಂಬರುವ ದಿನಗಳಲ್ಲಿ ಸಚಿವ ಜಮೀರ್ ಅಹಮದ್ ಅವರ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯದ ಭದ್ರ ಬೆಂಬಲವೇ ಕಾರಣ ಎಂಬ ಅಂಶವನ್ನು ಮರೆತು, ಜನಸಂಖ್ಯೆಗೆ ಅನುಗುಣವಾಗಿ ಸಮುದಾಯಕ್ಕೆ ನೀಡಬೇಕಾದ ರಾಜಕೀಯ ಸ್ಥಾನಮಾನಗಳನ್ನು ನೀಡದೆ ಪಕ್ಷವು ಅನ್ಯಾಯ ಮಾಡುತ್ತಿದೆ. ಕಾಂಗ್ರೆಸ್ ಮಾತ್ರವಲ್ಲದೆ ಜೆಡಿಎಸ್ ಮತ್ತು ಬಿಜೆಪಿ ಕೂಡ ಮುಸ್ಲಿಮರಿಗೆ ಸೂಕ್ತ ಸ್ಥಾನಮಾನ ನೀಡುವಲ್ಲಿ ಹಿಂದೇಟು ಹಾಕಿವೆ ಎಂದು ಒಕ್ಕೂಟದ ನಾಯಕರು ದೂರಿದರು.
ಕಾಂಗ್ರೆಸ್ ಪಕ್ಷವು ಕೂಡಲೇ ತನ್ನ ಪ್ರಮಾದಗಳನ್ನು ಸರಿಪಡಿಸಿಕೊಳ್ಳಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯವು ನಿರ್ಣಾಯಕ ನಿರ್ಧಾರ ಕೈಗೊಳ್ಳಲಿದೆ ಎಂದು ಧರ್ಮಗುರುಗಳು ಎಚ್ಚರಿಸಿದ್ದಾರೆ. “ದಾವಣಗೆರೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಯಾರು ಗೆದ್ದರೂ ಅವರು ನಮ್ಮವರೇ” ಎಂದು ಮಾರ್ಮಿಕವಾಗಿ ನುಡಿದಿರುವ ಅವರು, ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ಬಿಜೆಪಿ ಜೊತೆ ಬೇಕಾದರೂ ಹೋಗಲು ತಾವು ಸಿದ್ಧ ಎಂದು ಬಹಿರಂಗವಾಗಿ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮೌಲಾನಾ ಜಕಾಉಲ್ಲಾ, ಮೌಲಾನಾ ಇಬ್ರಾಹಿಂ, ನಿವೃತ್ತ ಪೊಲೀಸ್ ಅಧಿಕಾರಿ ಸುಹೇಲ್ ಅಹಮದ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
