ಮೈಸೂರು, ನವೆಂಬರ್ 21, 2025 : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಉತ್ತರ ನೀಡಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಮತ್ತು ಇನ್ನೂ ಎರಡು ಬಜೆಟ್‌ಗಳನ್ನು ಮಂಡಿಸುತ್ತೇನೆ. ಈ ಬಗ್ಗೆ ನಿಮಗೆ ಯಾಕೆ ಅನುಮಾನ? ಎಂದು ಪ್ರಶ್ನಿಸುವ ಮೂಲಕ ಚರ್ಚೆಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯಂತಹ ಯಾವುದೇ ತೀರ್ಮಾನವನ್ನು ಕೈಗೊಳ್ಳುವುದು ಹೈಕಮಾಂಡ್. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಮಾತನಾಡಿಲ್ಲ, ಹೈಕಮಾಂಡ್ ಸೂಚನೆಗಳನ್ನು ನಾನೂ ಸೇರಿದಂತೆ ಎಲ್ಲರೂ ಪಾಲಿಸುತ್ತೇವೆ ಎಂದು ಪುನರುಚ್ಚರಿಸಿದರು.ಸಚಿವ ಚಲುವರಾಯಸ್ವಾಮಿ ದೆಹಲಿಗೆ ತೆರಳಿರುವ ಬಗ್ಗೆ ನಾನೇ ಮಾತನಾಡಿದ್ದೇನೆ. ಅವರು ತಮ್ಮ ಇಲಾಖೆಯ ಕೆಲಸದ ಹಿನ್ನೆಲೆಯಲ್ಲಿ ಹೋಗಿದ್ದಾರೆ ಎಂದು ಸ್ಪಷ್ಟಪಡಿಸಿದರು. ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಈಗಾಗಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ, ಹಾಗಾಗಿ ನಾನು ಮತ್ತೊಮ್ಮೆ ವಿವರಣೆ ನೀಡುವ ಅಗತ್ಯವಿಲ್ಲ ಎಂದರು. ಡಿ.ಕೆ. ಸುರೇಶ್ ಅವರು ‘ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ನಡೆದುಕೊಳ್ಳುತ್ತಾರೆ’ ಎಂದು ಹೇಳಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, “ಹೌದು, ನಾನು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಕೊಟ್ಟ ಮಾತಿನಂತೆ ಗ್ಯಾರೆಂಟಿ ಜಾರಿ ಮಾಡಿ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಿದ್ದೇನೆ” ಎಂದು ಹೇಳುವ ಮೂಲಕ ಡಿ.ಕೆ. ಸಹೋದರರಿಗೆ ಪರೋಕ್ಷ ಟಾಂಗ್ ನೀಡಿದರು.
ರಾಜ್ಯದಲ್ಲಿ ಮೆಕ್ಕೆಜೋಳದ ಉತ್ಪಾದನೆ ಹೆಚ್ಚಾಗಿದ್ದರೂ, ಮಾರುಕಟ್ಟೆಯಲ್ಲಿ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ನೆರವು ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ.
ಮೆಕ್ಕೆಜೋಳದ ಖರೀದಿಗೆ ಸಂಬಂಧಿಸಿದಂತೆ ಈಗಾಗಲೇ ಸಭೆ ನಡೆಸಲಾಗಿದೆ. ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ₹2,400 ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ನಿಗದಿ ಮಾಡಲಾಗಿದೆ. ಮಾರುಕಟ್ಟೆ ಫೆಡರೇಶನ್‌ಗೆ 10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಖರೀದಿಸುವಂತೆ ಸೂಚನೆ ನೀಡಲಾಗಿದೆ ಹಾಗೂ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ತಿಳಿಸಲಾಗಿದೆ. ಡಿಸ್ಟಲರಿಸ್‌ಗಳು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮೆಕ್ಕೆಜೋಳ ಖರೀದಿಸುತ್ತಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ, ಡಿಸ್ಟಲರಿಸ್‌ಗಳ ಜೊತೆ ಮಾತನಾಡಿ ರೈತರಿಂದಲೇ ಖರೀದಿಸುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಕರ್ನಾಟಕದಲ್ಲಿ 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಉತ್ಪಾದನೆಯಾಗಿದೆ. ಈ ಮಾಹಿತಿ ಇದ್ದರೂ ಕೇಂದ್ರ ಸರ್ಕಾರ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿರುವುದು ಅನಗತ್ಯ. ಇದರಿಂದ ರೈತರಿಗೆ ಮತ್ತಷ್ಟು ಹೊಡೆತ ಬಿದ್ದಿದೆ. ಇದರ ಅಗತ್ಯ ಇರಲಿಲ್ಲ, ರಾಜ್ಯದಲ್ಲಿ ಬೆಳೆದ ಮೆಕ್ಕೆಜೋಳವನ್ನು ಇಲ್ಲೇ ಖರೀದಿ ಮಾಡಬಹುದಾಗಿತ್ತು.ರಾಜ್ಯದಲ್ಲಿ ಮೆಕ್ಕೆಜೋಳದ ಉತ್ಪಾದನೆ ಹೆಚ್ಚಿರುವುದರಿಂದ, ಕೇಂದ್ರ ಸರ್ಕಾರ ವಿದೇಶಗಳಿಂದ ಮೆಕ್ಕೆಜೋಳ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸುವಂತೆ ಪತ್ರ ಬರೆಯುವುದಾಗಿ ಸಿಎಂ ತಿಳಿಸಿದರು. ಅಲ್ಲದೆ, ಹಣಕಾಸು ಕಾರ್ಯದರ್ಶಿಗೆ (Finance Secretary) ಈ ಬಗ್ಗೆ ಮತ್ತೊಂದು ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ.
