ಮಂಡ್ಯ: ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬಂದಲ್ಲಿ ಜಿಲ್ಲಾ ಪಂಚಾಯತ್ ನಲ್ಲಿ ಸಹಾಯವಾಣಿ ಆರಂಭಿಸಲಾಗಿದ್ದು, ಸಾರ್ವಜನಿಕರು 08232-229624 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಸಮಸ್ಯೆ ಬಗ್ಗೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಂಜೀವಪ್ಪ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, ಈ ತಾಲ್ಲೂಕುಗಳ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಗಳು ಎದುರಾಗದಂತೆ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ವರೆಗೆ ಪ್ರತಿ 2ನೇ ಹಾಗೂ 4ನೇ ಸೋಮವಾರದಂದು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ವಸ್ತು ಸ್ಥಿತಿಯ ಸಭೆ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಎಲ್ಲ, ತಾಲೂಕು ಪಂಚಾಯತ್ ಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗಗಳ ಎಲ್ಲಾ ಸಹಾಯಕ ಕಾರ್ಯಪಾಲಕ ಅಭಿಯಂತರರೊಂದಿಗೆ ಸೋಮವಾರ ಸಭೆ ನಡೆಸಲಾಯಿತು.
ಜಿಲ್ಲೆಯಲ್ಲಿ 38 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, 37 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಹಾಗೂ 1 ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಬಳಸಿಕೊಂಡು ಸಮಸ್ಯೆಯಿರುವ ಗ್ರಾಮಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.