ಮೈಸೂರು, ಫೆಬ್ರವರಿ 5, 2026 : ಸಾಂಸ್ಕೃತಿಕ ನಗರಿಯ ಪ್ರತಿಷ್ಠಿತ ಜಯಚಾಮರಾಜ ಒಡೆಯರ್ ಗಾಲ್ಫ್ ಕ್ಲಬ್ ಆವರಣದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರ ಪಾಲಿಕೆಯು ಕಟ್ಟಡ ತೆರವುಗೊಳಿಸುವಂತೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ.
ನಗರ ಯೋಜನೆ ಮತ್ತು ಕಟ್ಟಡ ನಿರ್ಮಾಣ ನಿಯಮಾವಳಿಗಳನ್ನು ಉಲ್ಲಂಘಿಸಿ ಈ ಕಾಮಗಾರಿ ನಡೆಸಲಾಗಿದೆ ಎಂದು ಪಾಲಿಕೆ ಆಯುಕ್ತರು ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಸ್ಪಷ್ಟಪಡಿಸಿದ್ದಾರೆ. ಅನುಮತಿ ಪಡೆಯದೆ ನಿರ್ಮಿಸಲಾಗಿರುವ ಕಟ್ಟಡ ಹಾಗೂ ಹೆಚ್ಚುವರಿ ನಿರ್ಮಾಣಗಳನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಸೂಚನೆ ನೀಡಲಾಗಿದ್ದು, ಉಲ್ಲಂಘನೆಗೆ ಸಂಬಂಧಿಸಿದಂತೆ ಕಟ್ಟಡ ಸಂಖ್ಯೆ 1290 ಎನ್ 267/1 ಮತ್ತು 1290 ಎನ್ 267/1 ಎನ್-14 ರ ದಾಖಲೆಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿದ್ದಾರೆ.
ಇತ್ತೀಚೆಗಷ್ಟೇ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ನಿಯಮಗಳ ಉಲ್ಲಂಘನೆಯಾಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಗಾಲ್ಫ್ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಅವರು, ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದ್ದು, ಕಾನೂನು ಚೌಕಟ್ಟಿನಲ್ಲೇ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
