ಬೆಂಗಳೂರು, ಡಿಸೆಂಬರ್ 1, 2025 : ದಿತ್ವಾ ಚಂಡಮಾರುತ ದಕ್ಷಿಣ ಭಾರತದಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದ್ದು, ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಡಿ. 3ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮೈ ಕೊರೆಯುವ ಚಳಿ ಮಧ್ಯೆ ಮಳೆ ಅವಾಂತರ ಇರಲಿದೆ.
ಎಲ್ಲೆಲ್ಲಿ ಮಳೆ..?
ಬೆಂಗಳೂರು ಸೇರಿ ಅನೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಒಣ ಹವೆಗೆ ಮುಂದುವರೆಯುವ ಸಾಧ್ಯತೆ ಇದೆ.
ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಚಂಡಮಾರುತದ ಅಲೆ ಈಗ ದಕ್ಷಿಣ ಭಾರತವನ್ನ ನಡುಗಿಸುತ್ತಿದೆ. ತಮಿಳುನಾಡು ಈಗಾಗಲೇ ಹೈ ಅಲರ್ಟ್‌ನಲ್ಲಿದ್ದರೆ, ಕರ್ನಾಟಕದ ದಕ್ಷಿಣ ಒಳನಾಡು ‘ಯೆಲ್ಲೋ ಅಲರ್ಟ್’ನಲ್ಲಿದೆ.
