ತಾಂಡವಪುರ, ಫೆಬ್ರವರಿ 28, 2026 : “ನಾವು ಮತ್ತು ನೀವು ಎಲ್ಲರೂ ಸಾರ್ವಜನಿಕರ ಸೇವೆ ಮಾಡುವ ಸೇವಕರು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ,” ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.
ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ, ಬಳಿಕ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ರಾಂಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿದರಗೋಡು, ಕೆಂಬಾಲು, ಅಹಲ್ಯ, ಗೌಡರಹುಂಡಿ ಸೇರಿದಂತೆ ವಿವಿಧ ಗ್ರಾಮಗಳ ಸಾರ್ವಜನಿಕರ ಕುಂದುಕೊರತೆಗಳನ್ನು ಅವರು ಆಲಿಸಿದರು.

ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ: ಸಭೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ದೂರುಗಳ ಸುರಿಮಳೆಗರೆದರು. “ಗ್ರಾಮದಲ್ಲಿ ವಿದ್ಯುತ್ ಕಂಬಗಳ ಸಮಸ್ಯೆ, ಕುಡಿಯುವ ನೀರು, ಸ್ಮಶಾನದ ಕೊರತೆ ಹಾಗೂ ಚಿರತೆ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಉದ್ಧಟತನದ ಉತ್ತರ ನೀಡುತ್ತಾರೆ,” ಎಂದು ಡಾ. ಯತೀಂದ್ರ ಅವರ ಮುಂದೆ ಅಳಲು ತೋಡಿಕೊಂಡರು.
ಸ್ಥಳದಲ್ಲೇ ಅಧಿಕಾರಿಗಳಿಗೆ ತರಾಟೆ: ಗ್ರಾಮಸ್ಥರ ದೂರನ್ನು ಗಂಭೀರವಾಗಿ ಪರಿಗಣಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ, ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಕರೆದು ಬಹಿರಂಗವಾಗಿ ಪಾಠ ಮಾಡಿದರು. “ಜನಸೇವೆಯೇ ಪರಮಧರ್ಮ ಎಂಬುದು ನೆನಪಿರಲಿ. ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ನೀಡಬೇಕು. ಇನ್ನು ಮುಂದೆ ಇಂತಹ ಬೇಜವಾಬ್ದಾರಿ ವರ್ತನೆ ತೋರಬಾರದು,” ಎಂದು ಎಚ್ಚರಿಸಿದರು. ಅಲ್ಲದೆ, ವರುಣ ಕ್ಷೇತ್ರದಲ್ಲಿ ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಿ, ಹೊಸ ಕಂಬಗಳನ್ನು ಅಳವಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಅಧಿಕಾರಿಗಳು ಇದನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ: ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅವರು, “ನಿಮ್ಮ ಎಲ್ಲಾ ಸಮಸ್ಯೆಗಳನ್ನು ಗಮನಿಸಿದ್ದೇನೆ. ಹಂತ ಹಂತವಾಗಿ ಪ್ರತಿಯೊಂದು ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು,” ಎಂದು ಭರವಸೆ ನೀಡಿದರು.
ಗಣ್ಯರ ಉಪಸ್ಥಿತಿ: ಈ ಕಾರ್ಯಕ್ರಮದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ, ಜಿ.ಪಂ. ಮಾಜಿ ಸದಸ್ಯೆ ರೇವಮ್ಮ, ತಹಶೀಲ್ದಾರ್ ಸ್ಮಿತಾ ರಾಮು, ತಾ.ಪಂ. ಇಒ ಜರಾಳ್ ರಾಜೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
