ಮೈಸೂರು, ಡಿಸೆಂಬರ್ 10, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಡಿಸೆಂಬರ್ 13 ರಂದು ಹಮ್ಮಿಕೊಂಡಿರುವ ಹನುಮ ಹಬ್ಬದ ಆಚರಣೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಆಚರಣೆಯ ಪ್ರಚಾರಕ್ಕಾಗಿ ಹನುಮ ರಥಕ್ಕೆ ಇಂದು ಚಾಲನೆ ನೀಡಲಾಯಿತು.

ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಆಶ್ರಮದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಹನುಮ ರಥ ಮತ್ತು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿ, ‘ಲಾ ಗೈಡ್’ ಕನ್ನಡ ಮಾಸಪತ್ರಿಕೆಯ ಸಂಪಾದಕರಾದ ಹೆಚ್ ಎನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಭವ್ಯ ಮೆರವಣಿಗೆ ಆಯೋಜನೆ:
ಡಿಸೆಂಬರ್ 13 ರಂದು ಹನುಮ ಹಬ್ಬದ ಅಂಗವಾಗಿ ಮೈಸೂರಿನಲ್ಲಿ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಅರಮನೆಯ ಬಳಿಯ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿಯಿಂದ ಆರಂಭವಾಗಲಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ.
