ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು
ಪ್ರತಿನಿಧಿ ವರದಿ ಹನೂರು
ಯುಗಾದಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಯನ್ನು ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲ ಕಾರ್ಯಕ್ರಮಗಳು ಸಹ ಜರುಗಲಿದೆ ಎಂದು ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹೇಳಿದರು.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಯುಗಾದಿ ಜಾತ್ರಾ ಮಹೋತ್ಸವದ ಪೂರ್ವ ಸಿದ್ದತೆಯ ಸಭೆಯಲ್ಲಿ ಮಾತನಾಡಿದರು. ಯುಗಾದಿ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರು, ನೆರಳು ಹಾಗೂ ಶೌಚಾಲಯ , ದಾಸೋಹ ಹಾಗೂ ಸ್ವಚ್ಛತೆಯ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಜತೆಗೆ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಲಾಗುವುದು ಎಂದರು.
ಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಯುಗಾದಿ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಜೊತೆಗೆ ನೆರೆಯ ರಾಜ್ಯ ತಮಿಳು ನಾಡಿನಿಂದಲೂ ಹೆಚ್ಚಿನ ಭಕ್ತರು ಬರುವ ನಿರೀಕ್ಷೆಯಿದ್ದು ಸರ್ವರಿಗೂ ಒಳ್ಳೆಯ ರೀತಿಯ ವ್ಯವಸ್ಥೆ ಕಲ್ಪಿಸಲು ಮುಂಜಾಗ್ರತೆಯಾಗಿ ಕ್ರಮಕೈಗೊಳ್ಳಿ ಎಂದರು.
ಕಾಮಗಾರಿ ವೀಕ್ಷಣೆ : ಮಹದೇಶ್ವರ ಬೆಟ್ಟದ ಪ್ರತಿಮೆ ಬಳಿ ನಡೆಯುತ್ತಿರುವ ರಸ್ತೆ ಮತ್ತು ಪ್ರತಿಮೆ ನೆಲ ಅಂತಸ್ತಿನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪ್ರಾಧಿಕಾರದ ಕಾರ್ಯದರ್ಶಿ ರಘು ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರದ ನೌಕರರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

