ಮೈಸೂರು, ನವೆಂಬರ್ 11, 2025 : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಭೀಕರ ಸ್ಫೋಟದ ಘಟನಾವಳಿಗಳ ಹಿನ್ನೆಲೆಯಲ್ಲಿ, ಪ್ರವಾಸಿ ನಗರವಾದ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ, ಮೈಸೂರು ಪೊಲೀಸರು ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ.

ನಗರದಾದ್ಯಂತ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ತೀವ್ರ ತಪಾಸಣೆ ಮತ್ತು ಶೋಧ ಕಾರ್ಯವನ್ನು ಕೈಗೊಳ್ಳಲಾಗಿದೆ. ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣ, ಇತರ ಪ್ರಮುಖ ಸಾರ್ವಜನಿಕ ಮತ್ತು ಜನಸಂದಣಿ ಇರುವ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ, ಶೋಧ ಕಾರ್ಯ ನಡೆಸಲಾಗುತ್ತಿದೆ. ಅಲ್ಲದೆ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ವ್ಯಕ್ತಿಗಳ ಚಲನವಲನದ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ಹಗಲು-ರಾತ್ರಿ ತಪಾಸಣಾ ಕಾರ್ಯ ಮುಂದುವರೆದಿದೆ.
ಹಿರಿಯ ಅಧಿಕಾರಿಗಳಿಂದ ಭದ್ರತೆ ಪರಿಶೀಲನೆ
ಮೈಸೂರಿನ ಭದ್ರತಾ ವ್ಯವಸ್ಥೆ ಮತ್ತು ಕೈಗೊಂಡ ಕ್ರಮಗಳನ್ನು ಉನ್ನತ ಪೊಲೀಸ್ ಅಧಿಕಾರಿಗಳ ತಂಡ ಸ್ಥಳದಲ್ಲೇ ಪರಿಶೀಲಿಸಿತು. ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಬಿಂದುಮಣಿ,ಡಿಸಿಪಿ (ಸಂಚಾರ ಮತ್ತು ಅಪರಾಧ) ಸುಂದರ್ ರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ, ಪೊಲೀಸ್ ಬಂದೋಬಸ್ತ್ ಮತ್ತು ತಪಾಸಣೆಯ ಪ್ರಗತಿಯನ್ನು ಪರಿಶೀಲಿಸಿ, ಸಿಬ್ಬಂದಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮೈಸೂರು ಪೊಲೀಸರು ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
