ಮೈಸೂರು, ಜನವರಿ 30, 2026 : ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿಗಳು ಕೇವಲ ಊಹಾಪೋಹ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬೇರೆ ಬೇರೆ ಕಾರಣಗಳಿಗಾಗಿ ಕೆಲವು ಹಳೆಯ ಮತ್ತು ಹೊಸ ಸ್ನೇಹಿತರು ಇಂತಹ ಸುದ್ದಿಗಳನ್ನು ಹಬ್ಬಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ಸ್ವತಃ ಜಾರ್ಜ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ” ಎಂದು ತಿಳಿಸಿದರು.
ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ನಡೆದ ಎನ್‌ಸಿಬಿ (NCB) ದಾಳಿಯ ಕುರಿತು ಮಾತನಾಡಿದ ಸಚಿವರು, ಇದು ಕೇವಲ ಒಂದು ಫಾಲೋ-ಅಪ್ ಕೇಸ್ ಅಷ್ಟೇ ಹೊರತು ಇಲ್ಲಿ ಡ್ರಗ್ಸ್ ತಯಾರಿಕೆಗೆ ಸಂಬಂಧಿಸಿದ ಯಾವುದೇ ಕಚ್ಚಾ ವಸ್ತುಗಳು ಅಥವಾ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ. ದಾಳಿ ನಡೆದ ಸ್ಥಳವು ಫಿನಾಯಿಲ್ ತಯಾರಿಸುವ ಫ್ಯಾಕ್ಟರಿಯಾಗಿದ್ದು, ಅಲ್ಲಿನ ಆರೋಪಿಗಳ ಸಂಬಂಧಿಕರು ಇಲ್ಲಿದ್ದ ಕಾರಣ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದಲ್ಲಿ ಇಲ್ಲಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ಮಾಹಿತಿ ನೀಡಿದರು.
ಇನ್ನುಳಿದಂತೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿದ್ದು, ಅವುಗಳ ತನಿಖೆಯ ಬಗ್ಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು. 400 ಕೋಟಿ ದರೋಡೆಯಾಗಿದೆ ಎನ್ನಲಾದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ ಮತ್ತು ನಮ್ಮ ರಾಜ್ಯದ ಪೊಲೀಸರು ಇದರಲ್ಲಿ ಭಾಗಿಯಾಗಿಲ್ಲ. ಎಸ್ಐಟಿ (SIT) ವರದಿ ಬಂದ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಡಾ. ಜಿ. ಪರಮೇಶ್ವರ್ ವಿವರಿಸಿದರು.
