ಮೈಸೂರು (ನ.29): ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರು. ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿಗೆ ಪ್ರತಿ ತಿಂಗಳು 2 ಸಾವಿರ ರು.ನಂತೆ 59 ತಿಂಗಳ ಒಟ್ಟು 1,18,000 ರು.ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅರ್ಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 1,18,000 ರು. ವೈಯಕ್ತಿಕ ಹಣವನ್ನು ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಮೂಲಕ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದ್ದರು. ಹೀಗಾಗಿ ಪ್ರತಿ ತಿಂಗಳ ಯೋಜನೆಯ ಹಣ ನಾಡ ದೇವತೆಗೆ ಸಮರ್ಪಿಸುವ ವ್ಯವಸ್ಥೆಯನ್ನು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸಿದ್ದಾರೆ.

