ಮೈಸೂರು, ಜನವರಿ 24,2026 : ನಗರದ ರಾಮಸ್ವಾಮಿ ವೃತ್ತದಲ್ಲಿ ಇಂದು ಬಿಜೆಪಿ ಯುವ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಧಾನಸಭೆ ಅಧಿವೇಶನದ ವೇಳೆ ರಾಜ್ಯಪಾಲರು ತಮ್ಮ ಭಾಷಣ ಮುಗಿಸಿ ಹೊರಬರುವಾಗ ಕಾಂಗ್ರೆಸ್ ಶಾಸಕರು ಅವರಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಅವಮಾನ ಮಾಡಿದ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್ ಮತ್ತು ಶಾಸಕ ಬಾಲಕೃಷ್ಣ ಅವರನ್ನು ಕೂಡಲೇ ಸ್ಥಾನದಿಂದ ವಜಾಗೊಳಿಸಬೇಕೆಂದು ಪಟ್ಟು ಹಿಡಿದರು. ಕೇಂದ್ರ ಸರ್ಕಾರದ ಮಸೂದೆಯೊಂದರ ವಿರುದ್ಧ ರಾಜ್ಯ ಸರ್ಕಾರ ಅಧಿವೇಶನ ಕರೆದಿರುವುದನ್ನು ಟೀಕಿಸಿದ ಬಿಜೆಪಿ ನಾಯಕರು, ಸರ್ಕಾರಕ್ಕೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ದೂರಿದರು.
ಈ ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರದ ಧೋರಣೆಗಳ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದರು.
