ಬೆಂಗಳೂರು, ಡಿಸೆಂಬರ್ 17, 2025 : ಕರುನಾಡಲ್ಲಿ ತಾಪಮಾನ ತೀವ್ರ ಕುಸಿತಕಂಡಿದ್ದು, ವಿಪರೀತ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಅನೇಕ ಜಿಲ್ಲೆಗಳಲ್ಲಿ 14ಡಿಗ್ರಿಗೂ ಕಮ್ಮಿ ತಾಪಮಾನ ದಾಖಲಾಗಿದೆ.
ಮುಂದಿನ 2 ದಿನ ಶೀತಗಾಳಿ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.ಎಲ್ಲಾ ಜಿಲ್ಲೆಗಳಲ್ಲೂ ಕನಿಷ್ಠ ತಾಪಮಾನವು 14 ರಿಂದ 15 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಇಂದು ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ, ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಚಳಿ ಹಾಗೂ ಶೀತಗಾಳಿಯಿಂದಾಗಿ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮುಂದಿನ ಎರಡು ದಿನ ರಾಜ್ಯಾದ್ಯಂತ ಇದೇ ರೀತಿಯ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ. ಮಕ್ಕಳು ಹಾಗೂ ವಯೋವೃದ್ಧರು ಹೆಚ್ಚು ಜಾಗರೂಕರಾಗಿ ಇರುವಂತೆ ತಜ್ಞರು ಸಲಹೆ ನೀಡಿದ್ದಾರೆ.
