ಮೈಸೂರು, ಜನವರಿ 3, 2025 : ರಾಜ್ಯದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಅವರು ಮಾದಿಗ ಸಮುದಾಯದ ಪಾಲಿಗೆ ನಂಬರ್ ಒನ್ ವೈರಿಯಾಗಿದ್ದಾರೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯ ಅಧ್ಯಕ್ಷ ಅರುಣ್ ಕುಮಾರ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದರು. ಈಗಾಗಲೇ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಸಮಿತಿ, ನ್ಯಾ. ಸದಾಶಿವ ಆಯೋಗ ಹಾಗೂ ಮಾಧುಸ್ವಾಮಿ ನೇತೃತ್ವದ ಸಮಿತಿಗಳು ವಿಸ್ತೃತ ವರದಿಗಳನ್ನು ಸಲ್ಲಿಸಿವೆ. ಇಷ್ಟೆಲ್ಲಾ ವರದಿಗಳು ಕೈಯಲ್ಲಿದ್ದರೂ ಸಹ ಅನುಷ್ಠಾನಕ್ಕೆ ತರಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರವು ದಪ್ಪ ಚರ್ಮದ ಸರ್ಕಾರವಾಗಿ ವರ್ತಿಸುತ್ತಿದೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಕೇವಲ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯ ಅಜೆಂಡಾ ಆಗಿದ್ದು, ಸಾಮಾಜಿಕ ನ್ಯಾಯದ ಬಗ್ಗೆ ಕಾಳಜಿಯಿಲ್ಲ ಎಂದು ದೂರಿದರು.
ಮುಂದುವರಿದು ಮಾತನಾಡಿದ ಅರುಣ್ ಕುಮಾರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಅಹಿಂದ ನಾಯಕ ಎಂದು ಕರೆದುಕೊಳ್ಳುವುದು ಕೇವಲ ಡೋಂಗಿ ವಾದವಾಗಿದೆ. ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಒಳ ಮೀಸಲಾತಿಯನ್ನು ಜಾರಿಗೆ ತರದಿದ್ದರೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
