ಬೆಂಗಳೂರು, ಅ.10: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂ.ಗಳ ಆರ್ಥಿಕ ನೆರವನ್ನು ನೀಡುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ರಕ್ಷಾ ಬಂಧನದ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಇದುವರೆಗೂ 9.44ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಸದ್ಯ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಕೆಲವೆಡೆ ಅಪಸ್ವರ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಗೊಂದಲದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಗೊಂದಲಗಳಿಗೆ ತೆರೆಎಳೆದಿದ್ದಾರೆ. ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ. 5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ.