ಚಾಮುಂಡಿಬೆಟ್ಟದಲ್ಲಿ ‘ಜಗನ್ಮಾತೆ’ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಅದ್ದೂರಿಯಾಗಿ ನೆರವೇರುತ್ತಿದೆ. ಮುಂಜಾನೆಯಿಂದಲೇ ದೇವಿಗೆ ಕಾಲಾಂತರದಿಂದ ನಡೆದುಕೊಂಡು ಬಂದಿರುವ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದ್ದು , ಲಕ್ಷಾಂತರ ಜನರು ಅಮ್ಮನ ದರ್ಶನ ಪಡೆದು ಪುನೀತರಾಗಿದ್ದಾರೆ.

ಜಗನ್ಮಾತೆ ತಾಯಿ ಚಾಮುಂಡಿಯ ಜನ್ಮದಿನೋತ್ಸವದ ಅಂಗವಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನವನ್ನ ಪಡೆದಿದ್ದಾರೆ. ಅಲ್ಲದೆ ವರ್ಧಂತಿ ಹಿನ್ನೆಲೆ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಾಯಿ ಚಾಮುಂಡೇಶ್ವರಿಯ ವರ್ಧಂತಿ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ನಡೆಯುವ ಚಿನ್ನದ ಪಲ್ಲಕ್ಕಿ ಉತ್ಸವಕ್ಕೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಮತ್ತು ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆಯನ್ನ ನೀಡಿದ್ದಾರೆ. ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಚಿನ್ನದ ಪಲ್ಲಕ್ಕಿ ಉತ್ಸವಕ್ಕೆ ಚಾಲನೆಯನ್ನ ನೀಡಲಾಯ್ತು.

ವರ್ಧಂತಿ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತಾಧಿಗಳು ತಾಯಿ ಚಾಮುಂಡೇಶ್ವರಿಯ ದರ್ಶನವನ್ನು ಪಡೆದಿದ್ದಾರೆ. ವರ್ಧಂತಿ ಹಿನ್ನೆಲೆಯಲ್ಲಿ ತನ್ನ ಮೂಲ ರೂಪದಲ್ಲೇ ಚಿನ್ನದ ಪಲ್ಲಕ್ಕಿಯಲ್ಲಿ ವಿರಾಜಮಾನವಾಗಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿಯ ಚಿನ್ನದ ಪಲ್ಲಕ್ಕಿ ಉತ್ಸವವನ್ನು ಕಣ್ತುಂಬಿಕೊಂಡು ಭಕ್ತರು ಸಂತಸಗೊಂಡಿದ್ದಾರೆ.
ವರ್ಧಂತಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಮತ್ತಿತರ ಗಣ್ಯರು ಭೇಟಿ ನೀಡಿ ಚಿನ್ನದ ಪಲ್ಲಕ್ಕಿ ಉತ್ಸವದಲ್ಲಿ ಭಾಗಿಯಾಗಿದ್ದಾರೆ.
ವರ್ಧಂತಿ ಮಹೋತ್ಸವ ಹಿನ್ನೆಲೆ ಆಗಮಿಸಿರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
