ಮೈಸೂರು, ಜನವರಿ 8, 2026 : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಾರ್ವಜನಿಕರು ತಾಲ್ಲೂಕು ಕಚೇರಿಗೆ ಕೆಲಸಕ್ಕೆ ಹೋದಾಗ ಸಿಬ್ಬಂದಿಗಳು ಇರುವುದಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಂಸದರು ಈ ಭೇಟಿ ನೀಡಿದ್ದರು. “ಜನರು ಕೆಲಸಕ್ಕಾಗಿ ಅಲೆದಾಡುವುದನ್ನು ತಪ್ಪಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಪ್ರಾಧಾನ್ಯತೆಯ ಮೇರೆಗೆ ತ್ವರಿತವಾಗಿ ಬಗೆಹರಿಸಬೇಕು” ಎಂದು ತಹಸೀಲ್ದಾರ್ ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ವೇಳೆ ಮಾಧಯಮದವರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಮಾಜಿ ಶಾಸಕ ಎಲ್. ನಾಗೇಂದ್ರ ನಡುವಿನ ವಾಕ್ಸಮರದ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು, ಟಿಕೆಟ್ ಹಂಚಿಕೆ ಮಾಡುವುದು ರಾಜ್ಯ ಮತ್ತು ರಾಷ್ಟ್ರ ಮಟ್ಟದ ವರಿಷ್ಠರ ನಿರ್ಧಾರ.ಪಕ್ಷಕ್ಕಾಗಿ ಒಗ್ಗೂಡಿ ಕೆಲಸ ಮಾಡುವುದು ಎಲ್ಲರ ಮೊದಲ ಆದ್ಯತೆಯಾಗಬೇಕು.ಹಲವು ಆಕಾಂಕ್ಷಿಗಳು ಇರುವುದು ಸಹಜ, ಆದರೆ ವರಿಷ್ಠರು ಸೂಚಿಸುವ ಅಭ್ಯರ್ಥಿಗೆ ನಾವೆಲ್ಲರೂ ಬೆಂಬಲ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ: ಗಂಭೀರ ಆರೋಪ
ಮೈಸೂರಿನಲ್ಲಿ ಪೊಲೀಸ್ ಪೇದೆ ಮೇಲೆ ನಡೆದ ಹಲ್ಲೆ ಮತ್ತು ರಾಜ್ಯದ ಇತರೆಡೆ ನಡೆಯುತ್ತಿರುವ ಹಿಂಸಾಚಾರಗಳ ಬಗ್ಗೆ ಸಂಸದರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಪೊಲೀಸರ ಮೇಲೆಯೇ ಹಲ್ಲೆಯಾಗುತ್ತಿರುವುದು ಆತಂಕಕಾರಿ. ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ಅಮಾನವೀಯ. ಸಂತ್ರಸ್ತೆಯ ವಿರುದ್ಧವೇ ಕಾಂಗ್ರೆಸ್ ಆರೋಪ ಮಾಡುತ್ತಿರುವುದು ಸರಿಯಲ್ಲ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ನದಿಗಳ ಮಾಲಿನ್ಯದ ಬಗ್ಗೆ ಕಳವಳ
ಕಾವೇರಿ, ಕಪಿಲ ಮತ್ತು ಲಕ್ಷ್ಮಣತೀರ್ಥ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಕಲುಷಿತಗೊಳ್ಳುತ್ತಿರುವುದಕ್ಕೆ ಸಂಸದರು ವಿಷಾದ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಅಮೃತ್ ಯೋಜನೆ ಮತ್ತು ಜಲಜೀವನ್ ಮಿಷನ್ಗಳನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಜಾರಿಗೊಳಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ಸರ್ಕಾರದ ಕರ್ತವ್ಯವಾಗಿದ್ದು, ನದಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
