ಮೈಸೂರು, ಜನವರಿ 30, 2026 : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಹಗರಣವು ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾಗಿದ್ದು, ಇದೊಂದು ಕರಾಳ ಅಧ್ಯಾಯವಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದಂತೆ ನಿವೇಶನಗಳ ಲೂಟಿಯಾಗಿದೆ ಎಂದು ಕಿಡಿಕಾರಿದರು.
ಈ ಹಗರಣದ ಬಗ್ಗೆ ಪ್ರಸ್ತುತ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪು ಒಪ್ಪಿಕೊಂಡು ನಿವೇಶನಗಳನ್ನು ವಾಪಸ್ ನೀಡಿದ್ದಾರೆಯೇ ಹೊರತು, ಕಬಳಿಕೆಯಾಗಿರುವ ಇತರ ನಿವೇಶನಗಳನ್ನು ವಶಕ್ಕೆ ಪಡೆಯಲು ಎಂಡಿಎ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ರಾಜ್ಯ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಾಧಿಕಾರವು ತನ್ನ ಆಸ್ತಿಯನ್ನು ರಕ್ಷಿಸಿಕೊಳ್ಳಲು ಮುಂದಾಗದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಮುಡಾ ಅಥವಾ ಎಂಡಿಎ ಈ ಕೂಡಲೇ ಎಚ್ಚೆತ್ತುಕೊಂಡು ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳನ್ನು ತನ್ನ ಸುಪರ್ದಿಗೆ ಪಡೆಯಬೇಕು. ಸಾರ್ವಜನಿಕರು ಇಂತಹ ಅಕ್ರಮ ನಿವೇಶನಗಳನ್ನು ಖರೀದಿ ಮಾಡದಂತೆ ಪತ್ರಿಕಾ ಜಾಹಿರಾತಿನ ಮೂಲಕ ಎಚ್ಚರಿಕೆ ನೀಡಬೇಕು ಮತ್ತು ಪ್ರಾಧಿಕಾರಕ್ಕೆ ಸೇರಿದ ನಿವೇಶನಗಳಲ್ಲಿ ಅಧಿಕೃತ ನಾಮಫಲಕಗಳನ್ನು ಅಳವಡಿಸಬೇಕು. ಒಂದು ವೇಳೆ ಸರ್ಕಾರ ಮತ್ತು ಎಂಡಿಎ ಈ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ರಾಜ್ಯಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳುವುದರ ಜೊತೆಗೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ರಘು ಕೌಟಿಲ್ಯ ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
