ಸುಧಾಕರ್ ಬೆಂಬಲಕ್ಕೆ ನಿಂತ ಯಲಹಂಕ ಶಾಸಕ ವಿಶ್ವನಾಥ್
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಬಗ್ಗೆ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗಿದ್ದ ಮುನಿಸು ಶಮನವಾಗಿದೆ.
ಹಿರಿಯ ನಾಯಕರ ಸಮ್ಮುಖದಲ್ಲಿ ವಿವಾದ ಅಂತ್ಯಗೊಂಡಿದ್ದು, ಈ ಒಳಬೇಗುದಿಯನ್ನೇ ನೆಚ್ಚಿಕೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಮಹಾ ಶಾಕ್ ಆಗಿದೆ. ಶಾಸಕ ಎಸ್.ಆರ್.ವಿಶ್ವನಾಥ್ ಈವರೆಗೆ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ಗೆ ಬೆಂಬಲಿಸುವುದಿಲ್ಲ ಎಂದು ಬಹಿರಂಗವಾಗಿ ತಿಳಿಸಿ ವಿರೋಧ ವ್ಯಕ್ತಪಡಿಸಿದ್ದರು.
ತಮ್ಮ ಪುತ್ರನಿಗೆ ಟಿಕೆಟ್ ನೀಡದ ಕಾರಣ ಸಹಜವಾಗಿಯೇ ಶಾಸಕ ವಿಶ್ವನಾಥ್ ಮುನಿಸಿಕೊಂಡಿದ್ದರು. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಪರಿಸ್ಥಿತಿ ಬದಲಾಗಿದೆ. ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಅವರ ಸಮ್ಮುಖದಲ್ಲಿ ಸಂಧಾನ ಸಭೆ ನಡೆದು, ಕೊನೆಗೆ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಡಾ.ಕೆ.ಸುಧಾಕರ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮುಂದಿದ್ದ ದೊಡ್ಡ ತಡೆಯೊಂದು ನಿವಾರಣೆಯಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಬಿಜೆಪಿಯ ಈ ಸಣ್ಣ ಒಡಕನ್ನೇ ತಮ್ಮ ಲಾಭವಾಗಿಸಿಕೊಂಡು ಮತಗಳಾಗಿ ಪರಿವರ್ತಿಸಿಕೊಳ್ಳಲು ತಂತ್ರ ಹೂಡಿದ್ದರು. ಬಿಜೆಪಿ ನಾಯಕರ ನಡುವಿನ ಸಮಸ್ಯೆ ಇನ್ನಷ್ಟು ಬೆಳೆಯಲಿದ್ದು, ಇದರಿಂದ ಕಾಂಗ್ರೆಸ್‌ಗೆ ಒಂದಷ್ಟು ಮತಗಳು ಬರಬಹುದೆಂದು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿದ್ದರು. ಆದರೆ ಈಗ ಕಾಂಗ್ರೆಸ್ ನಾಯಕರಿಗೆ ಮುಖಭಂಗವಾಗಿ ಎಲ್ಲ ನಿರೀಕ್ಷೆ ಹುಸಿಯಾಗಿದೆ.
ಡಾ.ಕೆ.ಸುಧಾಕರ್‌ಗೆ ಆನೆ ಬಲ: ಈ ದಿಢೀರ್ ಬದಲಾವಣೆಯಿಂದಾಗಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ಆನೆ ಬಲ ಬಂದಂತಾಗಿದೆ. ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಉತ್ತಮ ಹೊಂದಾಣಿಕೆ ಬೆಳೆದಿದ್ದು, ಡಾ.ಕೆ.ಸುಧಾಕರ್ ನಿರಂತರವಾಗಿ ಸಮನ್ವಯ ಸಭೆಗಳನ್ನು ನಡೆಸಿ ಎಲ್ಲರ ವಿಶ್ವಾಸ ಗಳಿಸಿದ್ದಾರೆ. ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಸೇರಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಮುಖಂಡರ ಬೆಂಬಲ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈಗ ಯಲಹಂಕ ಕ್ಷೇತ್ರದಲ್ಲಿ ಸ್ವಪಕ್ಷೀಯರ ಸಂಪೂರ್ಣ ಬೆಂಬಲ ದೊರೆತಿದೆ. ಈ ಮೂಲಕ ಡಾ.ಕೆ.ಸುಧಾಕರ್ ಅವರಿಗೆ ವಿಜಯಲಕ್ಷ್ಮಿ ಒಲಿಯುವ ಹಾದಿ ಇನ್ನಷ್ಟು ಸುಗಮವಾಗಿದೆ. ಈ ಬಾರಿಯೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬೀಳಲಿದೆ ಎಂಬ ಸಂದೇಶ ಸ್ಪಷ್ಟವಾಗಿ ರವಾನೆಯಾಗಿದೆ.

