ಮೈಸೂರು , ಡಿಸೆಂಬರ್ 2, 2025 : ಪರಿಶಿಷ್ಟ ಜಾತಿಗಳಿಗೆ ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ ಹೋರಾಟ ಕೈಗೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಎಸ್ ಮಾರೆಪ್ಪ ಹಾಗು ಬಸವರಾಜು ಕೌತಾಳ್ ತಿಳಿಸಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಿಗೆ ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಆಗ್ರಹಿಸಿದರು. ಮೈಸೂರು ಚಲೋ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಂದಾಗಿದ್ದು, ಡಿಸೆಂಬರ್ 6ರಂದು ಡಾ. ಬಿ ಆರ್ ಅಂಬೇಡ್ಕರ್ ಪರಿನಿರ್ವಾಣ ಹೊಂದಿದ ದಿನದ ಅಂಗವಾಗಿ ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮಯಹುಂಡಿಯಿಂದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಲಾಗುತ್ತಿದೆ. ಡಿಸೆಂಬರ್ 11ರಂದು ಮೈಸೂರಿನ ಟೌನ್ ಹಾಲ್ ಮುಂಭಾಗದಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಎಸ್ ಮಾರೆಪ್ಪ ಹಾಗು ಬಸವರಾಜು ಕೌತಾಳ್ ಅವರು ಮಾಹಿತಿ ನೀಡಿದರು.
