ಮೈಸೂರು, ಏಪ್ರಿಲ್ 21, 2026 : ಮೈಸೂರು ಅಭಿವೃದ್ಧಿ ಪ್ರಾಧಿಕಾರವು (ಮುಡಾ) ನಗರದ ಹೊರವಲಯದಲ್ಲಿ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ದೇವನೂರು ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಯಶಸ್ವಿಯಾಗಿ ತೆರವುಗೊಳಿಸಿದೆ. ಮೈಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಬರುವ ದೇವನೂರು ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ.
ದೇವನೂರು ಗ್ರಾಮದ ಸರ್ವೆ ನಂ. 155, 156, 228/2, 229/1, 229/2 ಹಾಗೂ 153/2 ರ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಶೆಡ್‌ಗಳನ್ನು ನಿರ್ಮಿಸಿಕೊಳ್ಳಲಾಗಿತ್ತು. ಈ ಜಾಗವನ್ನು ವಾಹನಗಳ ತಂಗುದಾಣ ಹಾಗೂ ಇನ್ನಿತರ ವಾಣಿಜ್ಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ ಅಕ್ರಮ ಒತ್ತುವರಿ ಆಗಿರುವುದು ದೃಢಪಟ್ಟಿತ್ತು.
ಸರ್ಕಾರದ ಅಧಿಸೂಚನೆ ಹಾಗೂ ಭೂಸ್ವಾಧೀನ ಅಧಿಕಾರಿಗಳ ಅಧಿಕೃತ ಪತ್ರದ ಆಧಾರದ ಮೇಲೆ ಇಂದು ಬೆಳಿಗ್ಗೆಯಿಂದಲೇ ತೆರವು ಕಾರ್ಯಾಚರಣೆ ಆರಂಭವಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಜೆಸಿಬಿ ಯಂತ್ರಗಳ ಮೂಲಕ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಆ ಮೂಲಕ ಪ್ರಾಧಿಕಾರಕ್ಕೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
