ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಅಧಿಕೃತವಾಗಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಘಟನೆ ಸಂಬಂಧ ಮಂಗಳವಾರ ತನಿಖೆ ಆರಂಭಿಸಿರುವ ಎನ್ಐಎ ಅಧಿಕಾರಿಗಳು ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದರು. ಸ್ಥಳ ಮಹಾಜರು ನಡೆಸಿ ನಂತರ ಕ್ಯಾಶ್ ಕೌಂಟರ್, ಸ್ಪೋಟ ಸಂಭವಿಸಿದ ಸ್ಥಳ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು.ಆ ಬಳಿಕ ಕೆಫೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಎನ್ಐಎ ಎಸ್ಪಿ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.