ಬೆಂಗಳೂರು : ಕರ್ನಾಟಕದ ಮೂರು ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ, ಇಂದು ಬಿಜೆಪಿ ಜೊತೆಗಿನ ಸಮನ್ವಯ ಸಭೆ ಬಳಿಕ ಜೆಡಿಎಸ್ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಮಂಡ್ಯದಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಇನ್ನು ಕೋಲಾರದಲ್ಲಿ ಮಲ್ಲೇಶ್ ಬಾಬುಗೆ ಟಿಕೆಟ್ ನೀಡಲಾಗಿದೆ.
ಇತ್ತೀಚೆಗೆ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿದೆ. ಆದರೆ, ಕಾರಣಾಂತರಗಳಿಂದ ಪಟ್ಟಿ ಘೋಷಣೆ ಮುಂದೂಡಿಕೆಯಾಗಿತ್ತು. ಇದೀಗ ಮಾಜಿ ಸಿಎಂ ಎಚ್ಡಿಕೆ ಅವರು, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕರ್ತರ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ, ಬಂಗಾರಪೇಟೆ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಈ ಪೈಕಿ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ಪಕ್ಷ ಮಣೆ ಹಾಕಿದೆ.