ಮೈಸೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಚಿವರನ್ನೇ ಕಣಕ್ಕಿಳಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯೋಜನೆಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅಲೆಗೆ ಹೆದರಿದ ಸಚಿವರು ಯಾರೊಬ್ಬರೂ ಸ್ಪರ್ಧಿಸಲು ಮುಂದೆ ಬರಲೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 18 ಮಂದಿ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಸಿಎಂ ಹಾಗೂ ಡಿಸಿಎಂ ಮುಂದಾಗಿದ್ದರು. ಆದರೆ, ಸೋಲಿನ ಭೀತಿಯಿಂದ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ. ಕಡಿಮೆ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಯಾರ ಪರವಾಗಿಯೂ ಈ ಸರ್ಕಾರವಿಲ್ಲ ಎಂದು ಜನ ಬೇಸತ್ತಿದ್ದಾರೆ. ಜನಪ್ರಿಯತೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಈಗ ನಮ್ಮ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.