ಮೈಸೂರು, ಡಿಸೆಂಬರ್ 29, 2025 : ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆಯು ನಗರದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಬಿಗಿ ಭದ್ರತೆಯನ್ನು ಕೈಗೊಂಡಿದೆ.
ಅರಮನೆ ಆವರಣದಲ್ಲಿ ಶ್ವಾನದಳ ಹಾಗೂ ಸ್ಫೋಟಕ ಪತ್ತೆ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿನಿತ್ಯ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳನ್ನು ತಡೆದು ವಿಚಾರಣೆ ನಡೆಸಲಾಗುತ್ತಿದ್ದು, ಭದ್ರತಾ ದೃಷ್ಟಿಯಿಂದ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಪ್ರಸ್ತುತ ದೇಶ-ವಿದೇಶಗಳಿಂದ ಮೈಸೂರಿಗೆ ಪ್ರವಾಸಿಗರ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಅರಮನೆ ಮಾತ್ರವಲ್ಲದೆ ಮೈಸೂರು ಮೃಗಾಲಯ, ಚಾಮುಂಡಿಬೆಟ್ಟ ಹಾಗೂ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಎಲ್ಲಾ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರವಾಸಿ ತಾಣಗಳ ಪ್ರವೇಶ ದ್ವಾರಗಳಲ್ಲಿ ತಪಾಸಣೆಯನ್ನು ಕಟ್ಟುನಿಟ್ಟುಗೊಳಿಸಲಾಗಿದ್ದು, ಜಿಲ್ಲಾಡಳಿತವು ಸಂಪೂರ್ಣ ಭದ್ರತೆಯ ಭರವಸೆ ನೀಡಿದೆ.
