ಚಿಕ್ಕಬಳ್ಳಾಫುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಏಪ್ರಿಲ್ 20 ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾವರ್ಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರದಂದು ಚಿಕ್ಕಬಳ್ಳಾಫುರದ (ಬೆಂಗಳೂರು-ಹೈದರಾಬಾದ್) NH 44 ಬೈಪಾಸ್ ಅನ್ನು ಬಂದ್ ಮಾಡಲಾಗುತ್ತಿದೆ.
ಹೈದರಾಬಾದ್ ಅಥವಾ ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಚದಲಪುರ, ಚೊಕ್ಕಹಳ್ಳಿ ಮುಖಾಂತರ ಚಿಕ್ಕಬಳ್ಳಾಪುರ ನಗರದ ಒಳಗೆ ಪ್ರವೇಶಿಸಿ, ನಂತರ ಚಿಕ್ಕಬಳ್ಳಾಪುರ ಹೊರಗೆ ವಾಪಸಂದ್ರ ಬ್ರಿಡ್ಜ್ ಮೂಲಕ ರಾಷ್ಟ್ರೀಯ ಹೆದ್ದಾರಿ 44ಅನ್ನು ಕೂಡಬಹುದು. ವಾಹನ ಸವಾರರು ಯಾವುದೇ ಕಾರಣಕ್ಕೂ ಚಿಕ್ಕಬಳ್ಳಾಪುರ ಬಳಿ ಇರುವ ಬೈಪಾಸ್ ಮೇಲೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಮೋದಿ ಕಾರ್ಯಕ್ರಮ ವೇಳಾಪಟ್ಟಿ
ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.