ಮೈಸೂರು, ಡಿಸೆಂಬರ್ 19, 2025 : ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ, ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಸಮಿತಿಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನದೊಂದಿಗೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಯಿತು.

ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಬಿ.ಜೆ. ವಿಜಯ್ ಕುಮಾರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯ ಮೂಲಕ ಬಿಜೆಪಿ ಕಚೇರಿಯತ್ತ ನುಗ್ಗಲು ಪ್ರಯತ್ನಿಸಿದಾಗ, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಮಾರ್ಗಮಧ್ಯದಲ್ಲೇ ಬ್ಯಾರಿಕೇಡ್‌ಗಳನ್ನು ಅಳವಡಿಸಿ ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಕೆಲವು ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ದೂಡಿಕೊಂಡು ಕಚೇರಿಯತ್ತ ಓಡಲು ಯತ್ನಿಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಸ್ಥಳದಿಂದ ಕರೆದೊಯ್ದರು.

ಇನ್ನೊಂದೆಡೆ, ಕಾಂಗ್ರೆಸ್ ಮುತ್ತಿಗೆಯ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಪಾರ್ಟಿಯ ವಿರುದ್ಧ ಪ್ರತಿರೋಧದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಪರಸ್ಪರ ಘೋಷಣೆಗಳ ಅಬ್ಬರ ಕೇಳಿಬಂದು ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ಬಿಜೆಪಿ ಕಚೇರಿಗೆ ಹೋಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂ ದೋಬಸ್ತ್ ನಿಯೋಜಿಸಲಾಗಿತ್ತು. ಅಂತಿಮವಾಗಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ಬಳಿಕ ರಾಮಸ್ವಾಮಿ ವೃತ್ತ ಮತ್ತು ಬಿಜೆಪಿ ಕಚೇರಿ ಸುತ್ತಮುತ್ತಲಿನ ಪರಿಸ್ಥಿತಿ ತಿಳಿಯಾಯಿತು.
