ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಇಬ್ಬರು ಬಾಂಬರ್ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಮಾರ್ಚ್ 01 ರಂದು ಬೆಂಗಳೂರಿನ ವೈಟ್ಫಿಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿತ್ತು. ಈ ಪ್ರಕರಣವನ್ನು ಪ್ರಾರಂಭದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಳಿಕ ಪ್ರಕರಣ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿತು. ಪ್ರಕರಣ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಆರೋಪಿಯ ಜಾಡು ಹಿಡಿದು ಹೊರಟಿದ್ದಾರೆ. ಪ್ರಕರಣ ಸಂಬಂಧ ಮಾ.13 ರಂದು ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ಬಂಧಿಸಿದ್ದರು.