ಬೆಂಗಳೂರು, ನವೆಂಬರ್ 26, 2025 : ಸಿಎಂ ಸಿದ್ದರಾಮಯ್ಯ ಆಪ್ತ ಬಳಗದ ನಾಯಕ, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೀಗ ಮಂಗಳವಾರ ರಾತ್ರಿ ನಡೆದ ಭೇಟಿ ಹಾಗೂ ಮಾತುಕತೆ ಬಗ್ಗೆ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದರು.ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಆಗಿದೆ. ಪಕ್ಷ ಸಂಘಟನೆ, ಮುಂದಿನ ಚುನಾವಣೆ ಬಗ್ಗೆ ಚರ್ಚೆ ಆಗಿದೆ. ಹೈಕಮಾಂಡ್ ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ಆಸೆ ಇರುತ್ತದೆ. ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ತೀರ್ಮಾನಿಸಿದೆ. ಈಗಲೂ, ಗೊಂದಲದ ಸಮಯದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿ ಸಮಯ ಕೇಳುತ್ತೇನೆ. ಸಮಯ ಸಿಕ್ಕರೆ ನನ್ನ ಅಭಿಪ್ರಾಯ ಹೇಳುತ್ತೇನೆ. ಬದಲಾವಣೆ ಪರ್ವ ಏನಿಲ್ಲ. ಸಹಜವಾಗಿ ಡಿಕೆಶಿ ನನ್ನ ಭೇಟಿ ಮಾಡಿದ್ದಾರೆ. ಕೆಲವರನ್ನು ಮನೆಗೆ ಕರೆಸಿ ಭೇಟಿ ಆಗಿದ್ದಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಡಿಕೆ ಶಿವಕುಮಾರ್ ಎಲ್ಲಾ ಸಚಿವರು, ಶಾಸಕರನ್ನು ಭೇಟಿಯಾಗಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಬಹುಶಃ ಕೊನೆಯವನು ನಾನೇ ಇರಬೇಕು. ಸಾಕಷ್ಟು ಬಾರಿ ಡಿಕೆಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿದ್ದಾರೆ. ಈ ಹಿಂದೆ ಮಾಜಿ ಸಂಸದ ಡಿ.ಕೆ.ಸುರೇಶ್ ಸಹ ಭೇಟಿಯಾಗಿದ್ದರು. ನಾವು ಕೂಡ ಡಿಕೆ ನಿವಾಸಕ್ಕೆ ಹೋಗಿ ಬಂದಿದ್ದೇವೆ ಎಂದರು.
