ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ರಾಜ್ಯ ಸರ್ಕಾರದ ಮೇಲೆ ದೊಡ್ಡ ನಿರೀಕ್ಷೆ ಇತ್ತು. ಆರು ತಿಂಗಳಲ್ಲೇ ನಿರಾಸೆ ಮೂಡಿಸಿದೆ. ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೋಡೆತ್ತಿನ ರೀತಿ ಇದ್ದರು. ಈಗ ಒಬ್ಬರ ಮೇಲೆ ಒಬ್ಬರು ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಸಿದ್ದರಾಮಯ್ಯ ಕೆಳಗಿಳಿಸಬೇಕು ಅಂತ ಡಿ.ಕೆ.ಶಿವಕುಮಾರ್ ಕಾಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಹಣಿಯಲು ಎಷ್ಟು ಉಪಮುಖ್ಯಮಂತ್ರಿ ಮಾಡಬೇಕು ಅಂತ ಸಿದ್ದರಾಮಯ್ಯ ಯೋಚನೆ ಮಾಡುತ್ತಿದ್ದಾರೆ. ಅವರ ಕಿತ್ತಾಟದ ಬಗ್ಗೆ ನನಗೆ ತಕರಾರು ಇಲ್ಲ. ಸರ್ಕಾರ ಬಂದ ಮೇಲೆ ನಿಮ್ಮ ಸಾಧನೆ ಏನು ? ನಿಮ್ಮದೇ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ. ಬರ ಪರಿಸ್ಥಿತಿ ಬಗ್ಗೆ ಗಮನ ಹರಿಸಿಲ್ಲ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದು ಸರ್ಕಾರದ ಏಕೈಕ ಸಾಧನೆ. ಇದುವರೆಗೂ ಮೇವು ಸಂಗ್ರಹ ಮಾಡಿಲ್ಲ. ಉಸ್ತುವಾರಿ ಸಚಿವರು ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ನೀಡುತ್ತಿದ್ದ 4 ಸಾವಿರ ರೂ. ಅನುದಾನವನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಡಿತ ಮಾಡಲಾಗಿದೆ. ಇದು ರೈತ ವಿರೋಧಿ ಸರ್ಕಾರ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗಿವೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರ ಸ್ವಂತ ಜಿಲ್ಲೆಯಲ್ಲೇ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ನಡೆದಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.